ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಅಲ್ಲದೆ, ಗಾಯಾಳುಗಳ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಮಚಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ರೂ. ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಮಂದಿ ಸಾಬಿಗೀಡಾಗಿದ್ದಾರೆ. ಒಟ್ಟು 15 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರು ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅವರೆಲ್ಲ ಕುಮಟಾದ ಸಂತೆಗೆ ತರಕಾರಿ ಮಾರಾಟ ಮಾಡಲು ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದು ಘಟನೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ರಾತ್ರಿ ಕ್ರೂಸರ್ ವಾಹನ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದಾರೆ. 14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ