ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ.
ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು.
ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ ಕಾಯಿದೆಯ ಸೆಕ್ಷನ್‌ 102 ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಅನುಪಾಲಿಸಿಲ್ಲ. ಬಂಧನ ಮೆಮೊವನ್ನು ನೀಡಲಾಗಿಲ್ಲ. ಆಕೆ ನಿದ್ರಿಸುವುದಕ್ಕೆ ಅವಕಾಶ ನೀಡದೇ ಆಕೆಯ ಹೇಳಿಕೆ ದಾಖಲಿಸಿಕೊಂಡಿದ್ದು, ಇದು ಸ್ವಯಂ ಹೇಳಿಕೆಯಾಗುವುದಿಲ್ಲ ಎಂದು ವಾದಿಸಿದರು.

ಪ್ರಾಸಿಕ್ಯೂಷನ್‌ ಪ್ರತಿನಿಧಿಸಿದ್ದ ಹಿರಿಯ ಸ್ಥಾಯಿ ವಕೀಲ ಮಧು ಎನ್. ರಾವ್‌ ಅವರು “ಕಸ್ಟಮ್ಸ್‌ ಕಾಯಿದೆಗೆ ಅನುಗುಣವಾಗಿ ರನ್ಯಾರನ್ನು ಬಂಧಿಸಲಾಗಿದೆ. ಒಂದೊಮ್ಮೆ ಕಾಯಿದೆಯನ್ನು ಪಾಲಿಸದಿದ್ದರೂ ಮೇಲ್ನೋಟಕ್ಕೆ ಆರೋಪವಿದ್ದಾಗ ವಶಕ್ಕೆ ಪಡೆಯಲು ಅವಕಾಶವಿದೆ ಎಂದು ಕಾನೂನು ಹೇಳುತ್ತದೆ. ಚಿನ್ನ ಕಳ್ಳ ಸಾಗಣೆಯಲ್ಲಿ ದೊಡ್ಡ ಜಾಲವಿದ್ದು, ಅದನ್ನು ಭೇದಿಸಬೇಕಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ದಾಖಲೆಗಳಿಗೆ ಕಾಯಲಾಗುತ್ತಿದ್ದು, ತನಿಖೆ ನಡೆಯುತ್ತಿದೆ. ಹೀಗಾಗಿ, ಆಕೆಗೆ ಜಾಮೀನು ನೀಡಬಾರದು” ಎಂದು ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಾರ್ಚ್‌ 14ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿತು.
ಮೂರು ದಿನ ಡಿಆರ್‌ಐ ಕಸ್ಟಡಿಯಲ್ಲಿದ್ದ ರನ್ಯಾರನ್ನು ನ್ಯಾಯಾಲಯವು ಕಳೆದ ಸೋಮವಾರ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ರನ್ಯಾ ಪತಿ ಜತಿನ್‌ ಹುಕ್ಕೇರಿ ವಿರುದ್ಧ ಆತುರ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.

ಪ್ರಮುಖ ಸುದ್ದಿ :-   ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಏನಿದು ಪ್ರಕರಣ:
ಮಾರ್ಚ್‌ 3ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್‌ ಬಂಧಿಸಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯಿಂದ ₹12.86 ಕೋಟಿ ಮೌಲ್ಯದ 14.2 ಕೆ ಜಿ ಚಿನ್ನ ಜಫ್ತಿ ಮಾಡಿದ್ದರು. ಕಸ್ಟಮ್‌ ಅಧಿಕಾರಿಗಳ ತಪಾಸಣೆ ತಪ್ಪಿಸಿಕೊಳ್ಳಲು ರನ್ಯಾ ಚಿನ್ನವನ್ನು ಬೆಲ್ಟ್‌ ಮತ್ತು ಜಾಕೆಟ್‌ಗಳಲ್ಲಿ ಇಟ್ಟುಕೊಂಡು ಬರುತ್ತಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯದ ಡಿಜಿಪಿ ಶ್ರೇಣಿ ಅಧಿಕಾರಿಯೊಬ್ಬರ ಮಲಮಗಳಾದ ರನ್ಯಾ ಅತಿ ಗಣ್ಯ ವ್ಯಕ್ತಿಗಳಿಗೆ ಇರುವ ಮಾರ್ಗದ ಮೂಲಕ ವಿಮಾನ ನಿಲ್ದಾಣದಿಂದ ಸರಾಗವಾಗಿ ಹೊರಬರುತ್ತಿದ್ದರು ಎನ್ನಲಾಗಿದೆ.
ರನ್ಯಾ ಮನೆಯಲ್ಲಿ ಶೋಧ ನಡೆಸಿದ್ದ ಡಿಆರ್‌ಐ ಅಧಿಕಾರಿಗಳು ₹2.06 ಕೋಟಿ ಮೌಲ್ಯದ ಆಭರಣ ಮತ್ತು ₹2.67 ಕೋಟಿ ನಗದು ಜಫ್ತಿ ಮಾಡಿದ್ದರು. ಇದರಿಂದ ಪ್ರಕರಣದಲ್ಲಿ ಒಟ್ಟು ಜಫ್ತಿಯು ₹17.29 ಕೋಟಿಗೆ ಏರಿಕೆಯಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement