ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್ 18ರಿಂದ 22ರ ವರೆಗೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಪೈಕಿ ಮಾರ್ಚ್ 18 ಮತ್ತು 19ರಂದು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಬಹುದು ಎಂದು ತಿಳಿಸಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ.
ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆ ಸಾಧ್ಯತೆ…
ಮಾರ್ಚ್ 17ರಂದು ದಕ್ಷಿಣ ಕನ್ನಡ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Rain ) ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನಲ್ಲಿ 30-40 ಕಿಮೀ ವೇಗದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ