ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ ; ಯಾರು ಈ ಅಧಿಕಾರಿ..?

ನವದೆಹಲಿ: ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿಯಾದ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
ಪ್ರಧಾನಿ ಕಚೇರಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ, ನಿಧಿ ತಿವಾರಿ ಅವರನ್ನು ಪ್ರಧಾನಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿಯನ್ನು ಅನುಮೋದಿಸಿದೆ.

ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಯಾರು?
ವಾರಾಣಸಿಯ ಮೆಹಮುರ್ಗಂಜ್ ಮೂಲದ ನಿಧಿ ತಿವಾರಿ 2013 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದರು. ವಾರಾಣಸಿ ಲೋಕಸಭಾ ಕ್ಷೇತ್ರವನ್ನು ಪ್ರಧಾನಿ ಮೋದಿ 2014ರಿಂದ ಪ್ರತಿನಿಧಿಸುತ್ತಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೊದಲು, ಅವರು ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ (ವಾಣಿಜ್ಯ ತೆರಿಗೆ) ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಲೇ ಅವರು ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. 2016ರಲ್ಲಿ ಅವರಿಗೆ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಬಿಮಲ್ ಸನ್ಯಾಲ್ ಸ್ಮಾರಕ ಪದಕವನ್ನು ನೀಡಿ ಪುರಸ್ಕರಿಸಲಾಗಿತ್ತು. ತಿವಾರಿ ಅವರು ಪ್ರಧಾನ ಮಂತ್ರಿ ಕಚೇರಿಯಲ್ಲಿ 2022ರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇರ್ಪಡೆಯಾದರು. ಜನವರಿ 6, 2023 ರಿಂದ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಿವಾರಿ ಅವರು ಪ್ರಧಾನಿ ಸಚಿವಾಲಯದಲ್ಲಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು.
ಪ್ರಧಾನ ಮಂತ್ರಿ ಕಚೇರಿಯಲ್ಲಿ, ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರಿಗೆ ವರದಿ ಮಾಡುವ ‘ವಿದೇಶಾಂಗ ಮತ್ತು ಭದ್ರತೆ’ಯಲ್ಲಿ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement