ಬೆಂಗಳೂರು : ಮುಂದಿನ ನಾಲ್ಕೈದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದೆ.
ತಮಿಳುನಾಡು ಮತ್ತು ನೆರೆಹೊರೆಗಳಲ್ಲಿ ಮೇಲ್ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀವರೆಗೆ ವಿಸ್ತರಿಸಿದೆ. ದಕ್ಷಿಣ ಅಂಡಮಾನ್ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀವರೆಗೆ ವಿಸ್ತರಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಿಂದ ನೈಋತ್ಯ ಮಧ್ಯಪ್ರದೇಶದವರೆಗೆ ಮರಾಠವಾಡದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇದೆ ಎಂದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ