ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೋರಿ ಮೇಲ್ಮನವಿ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ ಬದಲಿ ನಿವೇಶಗಳನ್ನು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ, ಆಕ್ಷೇಪಾರ್ಹವಾದ ಜಮೀನಿನ ಮಾಲೀಕ ದೇವರಾಜುಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್‌ 28ಕ್ಕೆ ಮುಂದೂಡಿತು.
ಸೆಪ್ಟೆಂಬರ್‌ 27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement