ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ :  ಡಿನೋಟಿಫಿಕೇಷನ್  ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.
ನ್ಯಾ. ಜೆ.ಬಿ ಪರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಸೋಮವಾರ ಈ ಬಗ್ಗೆ ತೀರ್ಪು ನೀಡಿದ ಪೀಠ, ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ.
ಈ ಹಂತದಲ್ಲಿ ಮತ್ತೊಂದು ತೀರ್ಪು ನೀಡುವುದು ಸೂಕ್ತವಲ್ಲ. ಹೀಗಾಗಿ, ಹೆಚ್ಚಿನ ವಿಚಾರಣೆಗಾಗಿ ನಾವು ವಿಸ್ತೃತ ಪೀಠಕ್ಕೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿತು.

ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎಂಬವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಃಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 2021ರ ಜನವರಿ 5 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ನ್ಯಾ. ಮನೋಜ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್‌ 4ರಂದು ವಿಚಾರಣೆ ಪೂರ್ಣಗೊಳಿಸಿತು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಕೆಲವರ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27ರಂದು ಆದೇಶ ನೀಡಿತ್ತು.

ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement