ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಅದರಂತೆ, ಮೂಡಲಗಿ ಪೊಲೀಸರು ಮೇಖಳಿಯ ರಾಮಮಂದಿರಕ್ಕೆ ಆಗಮಿಸಿ ಲೋಕೇಶ್ವರ ಮಹಾರಾಜ ಸ್ವಾಮೀಜಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.
ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದರು. 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು, ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೈಲುಪಾಲಾಗಿರುವ ಲೋಕೇಶ್ವರ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
”ಸ್ವಾಮೀಜಿ ವಿರುದ್ಧ ಮೂಡಲಗಿ ಠಾಣೆಯಲ್ಲಿ ಪೋಕ್ಸೊ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಸ್ವಾಮೀಜಿ ಮಾತ್ರ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆರೋಪಿಯನ್ನು ಬಂಧಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಸೋಮವಾರ ಕೋರ್ಟ್‌ಗೆ ಮನವಿ ಮಾಡಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಕೃತ್ಯ ನಡೆದ ಬಾಗಲಕೋಟೆ, ರಾಯಚೂರು ಲಾಡ್ಜ್ ಮಾಲೀಕರನ್ನೂ ವಿಚಾರಣೆಗೆ ಒಳಪಡಿಸಲಾಗುವುದು. ಆರೋಪಿಯ ಮೂಲ ಜಿಲ್ಲೆ ಕಲಬುರಗಿ ಜಿಲ್ಲೆಯ ಚಿತ್ತಾಪುರಕ್ಕೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುವುದು,” ಎಂದು ತಿಳಿಸಿದ್ದಾರೆ.
ಆರೋಪಿ ಮೇಖಳಿಯಲ್ಲಿ ಮಠ ಕಟ್ಟಿಕೊಂಡು ಹಠಯೋಗಿ ಲೋಕೇಶ್ವರ ಸ್ವಾಮೀಜಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಮಠದಲ್ಲಿ ಮಚ್ಚು, ಲಾಂಗು, ಚಾಕು ಇತ್ಯಾದಿ ಪತ್ತೆಯಾಗಿವೆ. ಸ್ವಾಮೀಜಿ ಮಾಟ- ಮಂತ್ರ ಮಾಡುವುದು, ಮಟ್ಕಾ ಸಂಖ್ಯೆ ಹೇಳುತ್ತಿದ್ದ ಬಗ್ಗೆ ಆರೋಪಗಳಿವೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ