ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು.
ಪೊಲೀಸರ ಪ್ರಕಾರ, ಆರ್ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಬಂಧಿಸಲಾಯಿತು.
ಬಂಧಿತ ಉಳಿದವರ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಅವರು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಾದ ಡಿಎನ್ಎ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ನ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಇಬ್ಬರು ಅಧಿಕಾರಿಗಳು – ಕಾರ್ಯದರ್ಶಿ ಶಂಕರ ಮತ್ತು ಖಜಾಂಚಿ ಜಯರಾಮ- ಪರಾರಿಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಅವರ ಮನೆಗಳಲ್ಲಿ ಈ ಇಬ್ಬರು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸಿದ್ದು, ಆರ್ಸಿಬಿಯ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತಕುಮಾರ ಸಿಂಗ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ ಕೆಲವೇ ಗಂಟೆಗಳ ನಂತರ, ಆರ್ಸಿಬಿ ತಂಡ, ಡಿಎನ್ಎ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕೆಎಸ್ಸಿಎ ಪ್ರತಿನಿಧಿಗಳನ್ನು ಬಂಧಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿರುವ ವಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ ನಂತರ ರಾಜ್ಯ ಸರ್ಕಾರದ ಈ ಕ್ರಮವು ಹೊರಬಿದ್ದಿದೆ. ಬಿಜೆಪಿ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಆರೋಪಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ