ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್‌ ಅವರ ಪುತ್ರನಾದ ಕೃಷ್ಣ ಜೆ.ರಾವ್‌ ಎಂಬಾತನನ್ನು ಪೊಲೀಸರು ತೀವ್ರ ಹುಡುಕಾಟ ನಡೆಸಿ ಕೊನೆಗೂ ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಕೃಷ್ಣ ರಾವ್ ನನ್ನು ಪತ್ತೆಹಚ್ಚಿ, ಜುಲೈ 4 ರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ನಂತರ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮಂಗಳೂರಿಗೆ ಕರೆತರಲಾಗಿದೆ ಎಂದು ಹೇಳಲಾಗಿದೆ.
ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಆಕೆಯನ್ನು ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದಳು. ನಂತರ ಈಕೆ ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದ. ಪುತ್ತೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಮುಖ ಸುದ್ದಿ :-   ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement