ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.
ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ.
ಪ್ರಜ್ವಲ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರದೆಯೇ ಹೈಕೋರ್ಟ್‌ಗೆ ಬರಬಹುದಾಗಿದೆ” ಎಂದು ವಾದಿಸಿದರು. ಇದನ್ನು ಒಪ್ಪದ ನ್ಯಾಯಾಲಯವು ವಿಚಾರಣಾ ನ್ಯಾಯಾಲಯದಲ್ಲಿ ಮೊದಲಿಗೆ ಅವಕಾಶ ಬಳಕೆ ಮಾಡುವಂತೆ ಸೂಚಿಸಿತು.

“ಮೊದಲಿಗೆ ಪ್ರಜ್ವಲ್‌ ಅವರು ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಅಲ್ಲಿನ ಅರ್ಜಿ ಪುರಸ್ಕಾರವಾಗದಿದ್ದರೆ ಹೈಕೋರ್ಟ್‌ಗೆ ಬರಲು ಅವಕಾಶವಿದೆ. ಪ್ರಜ್ವಲ್‌ ಸಲ್ಲಿಸುವ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು” ಎಂದು ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿದೆ. ರಾಜ್ಯ ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ ಹಾಜರಿದ್ದರು.
ಕಳೆದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮಕುಮಾರ, “ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಆರೋಪಿಯು ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಅಲ್ಲಿನ ಅರ್ಜಿ ವಜಾಗೊಂಡ ಬಳಿಕ ಹೈಕೋರ್ಟ್‌ಗೆ ಬರಬಹುದು. ಆದರೆ, ಹಾಲಿ ಪ್ರಕರಣದಲ್ಲಿ ನೇರವಾಗಿ ಹೈಕೋರ್ಟ್‌ಗೆ ಬಂದಿರುವುದರಿಂದ ಅವರ ಅರ್ಜಿ ಪುರಸ್ಕರಿಸಬಾರದು ಎಂದು ಮನವಿ ಮಾಡಿದ್ದರು.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement