ಬೆಂಗಳೂರು: ಮುಂದಿನ ಐದಾರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಎರಡ್ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಒಟ್ಟು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಮುಂದಿನ ಐದಾರು ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಬಲವಾದ ಗಾಳಿಯೂ ಇರಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಜುಲೈ 19ರ ನಡುವೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.
ಜುಲೈ 21 ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 20 ಮತ್ತು 21 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು (ಗ್ರಾಮೀಣ ಮತ್ತು ನಗರ), ಮೈಸೂರು ಮತ್ತು ಮಂಡ್ಯ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.


ನಿಮ್ಮ ಕಾಮೆಂಟ್ ಬರೆಯಿರಿ