ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.
ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ ಸುನೀಲದತ್ತ ಯಾದವ ಅವರ ಪೀಠವು ತಿರಸ್ಕರಿಸಿದೆ.
“ದೇವಸ್ಥಾನದ ಆಡಳಿತವನ್ನು ನಿಯಂತ್ರಣಕ್ಕೆ ಪಡೆಯುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಜ್ಯ ಸರ್ಕಾರ ಸಾಕ್ಷ್ಯದ ರೂಪದಲ್ಲಿ ಮೆಮೊ ಜೊತೆಗೆ ಸಲ್ಲಿಸಿದೆ. ಮಹಜರ್‌, ಇನ್‌ವೆಂಟ್ರಿ ದಾಖಲಿಸಿದ್ದು, ದೇವಸ್ಥಾನವನ್ನು ವಶಕ್ಕೆ ಪಡೆಯುವ ಕೆಲಸ ಮುಕ್ತಾಯವಾಗಿದೆ. ಕಾಯಿದೆಯ ಪ್ರಕಾರ ಸರ್ಕಾರ ಅಧಿಕಾರ ಚಲಾಯಿಸಿದೆ. ಈ ಹಂತದಲ್ಲಿ ಆದೇಶಕ್ಕೆ ತಡೆ ನೀಡುವ ಮೂಲಕ ಮಧ್ಯಪ್ರವೇಶ ಮಾಡಲು ಯಾವುದೇ ಆಧಾರ ಕಂಡುಬರುತ್ತಿಲ್ಲ. ಹೀಗಾಗಿ, ಮಧ್ಯಂತರ ಕೋರಿಕೆಯನ್ನು ತಿರಸ್ಕರಿಸಲಾಗಿದೆ. ರಾಜ್ಯ ಸರ್ಕಾರವು ಹತ್ತು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಪ್ರಕ್ರಿಯೆಯ ದಾಖಲೆಗಳನ್ನು ಈ ನ್ಯಾಯಾಲಯದ ಮುಂದೆ ಇಡಬೇಕು. ಎರಡು ವಾರಗಳ ಬಳಿಕ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

“ಸರ್ಕಾರವು ಸಂಬಂಧಿತರಿಗೆ ಷೋಕಾಸ್‌ ನೋಟಿಸ್‌ ನೀಡಿದೆ. ಅರ್ಜಿದಾರರಿಗೆ ತಮ್ಮ ವಾದ ಮಂಡಿಸಲು ಸೂಕ್ತ ಕಾಲಾವಕಾಶ ನೀಡಲಾಗಿದೆ. ತನಿಖಾ ವರದಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಖಾತೆಯಲ್ಲಿ ವ್ಯತ್ಯಾಸಗಳಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನೋಟಿಸ್‌ ನೀಡಿದ ಬಳಿಕ ವರದಿ ಸಿದ್ಧಪಡಿಸಲಾಗಿದೆ ಎಂಬುದನ್ನೂ ತನಿಖಾ ವರದಿಯಲ್ಲಿ ವಿವರಿಸಲಾಗಿದೆ. ಹುಂಡಿಯ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಗಂಭೀರ ಆರೋಪ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ.
ಹುಂಡಿಯ ಹಣವನ್ನು ದುರ್ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ವಿಡಿಯೊಗಳನ್ನು ನ್ಯಾಯಾಲಯಕ್ಕೆ ತೋರಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳ ಕಾಯಿದೆ ಸೆಕ್ಷನ್‌ 43ರ ಅಡಿ ಪ್ರಕ್ರಿಯೆ ಮೇಲ್ನೋಟಕ್ಕೆ ಅನುಸರಿಸಲಾಗಿದೆ. ಇಡೀ ಪ್ರಕ್ರಿಯೆಯು ಪ್ರಾಥಮಿಕ ಹಂತದಲ್ಲಿದ್ದು, ಆಯುಕ್ತರು ಸಂಸ್ಥೆಯ ಆಡಳಿತ ನಿರ್ವಹಣೆಯನ್ನು ಸರ್ಕಾರ ತೆಗೆದುಕೊಳ್ಳುವುದಕ್ಕೆ ಶಿಫಾರಸ್ಸು ಮಾಡಿದ್ದಾರೆ” ಎಂದು ನ್ಯಾಯಾಲಯ ಆದೇಶದಲ್ಲಿ ದಾಖಲಿಸಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement