ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆಗಳ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ.
ಎಸ್‌ಐಟಿಯ ನೇತೃತ್ವವನ್ನು ಪ್ರಣವ ಮೊಹಂತಿ ವಹಿಸಿಕೊಂಡಿದ್ದಾರೆ. ಐಪಿಎಸ್‌ ಅಧಿಕಾರಿಗಳಾದ ಎಂ.ಎನ್. ಅನುಚೇತ್‌, ಸೌಮ್ಯಲತಾ ಮತ್ತು ಜಿತೇಂದ್ರಕುಮಾರ ದಯಾಮ ಅವರು ಈ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಈ ತಂಡವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು “ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ” ಎಂದು ಶನಿವಾರ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ.
ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ. ತಾನೇ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಈಗ ಪಾಪಪ್ರಜ್ಞೆ ಕಾಡುತ್ತಿದೆ ಎಂದು ವಕೀಲರ ಮೂಲಕ ಹೇಳಿಕೊಂಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ನಂತರದಲ್ಲಿ ರಾಜ್ಯ ಸರ್ಕಾರ ಎಸ್‌ ಐಟಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಗಳು ಕೇಳಿಬಂದಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ನಾಲ್ವರು ಐಪಿಎಸ್‌ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement