ಧರ್ಮಸ್ಥಳದ ದೇವಸ್ಥಾನ, ಕಾರ್ಯದರ್ಶಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಬೆಂಗಳೂರಿನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಆದೇಶಿಸಿದೆ.
ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಧರ್ಮಸ್ಥಳದಲ್ಲಿ ಕೊಲೆಯಾಗಿರುವ ಹಲವಾರು ಶವಗಳನ್ನು ತಮಗೆ ಬೆದರಿಕೆಯೊಡ್ಡುವ ಮೂಲಕ ಹೂಳಿಸಲಾಗಿದೆ ಎಂದು ಸ್ವಚ್ಛತಾ ಕಾರ್ಮಿಕರೊಬ್ಬರು ಆಪಾದಿಸಿದ್ದರು. ಈ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆಯ ವಿಚಾರಣೆಯನ್ನು ಹತ್ತನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ನಡೆಸಿದರು.

ಅರ್ಜಿದಾರರಿಗೆ ಸರಿಪಡಿಸಲಾಗದ ಧಕ್ಕೆ ಮತ್ತು ಖ್ಯಾತಿಗೆ ಹಾನಿಯಾಗುವ ಸಾಧ್ಯತೆಯನ್ನು ಉಲ್ಲೇಖಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯವನ್ನು ಪೋಸ್ಟ್ ಮಾಡುವುದನ್ನು ಅಥವಾ ಹಂಚಿಕೊಳ್ಳುವುದನ್ನು ನಿರ್ಬಂಧಿಸಿದೆ.
ಬಾರ್‌ & ಬೆಂಚ್‌ ವರದಿ ವರದಿ ಪ್ರಕಾರ, ಸಂಸ್ಥೆ ಮತ್ತು ದೇವಾಲಯಗಳ ವಿರುದ್ಧ ಆರೋಪ ಬಂದಾಗ, ಅದು ವಿವಿಧ ಕಾಲೇಜುಗಳು ಮತ್ತು ಶಾಲೆಗಳಲ್ಲಿ ಓದುತ್ತಿರುವ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಜನರ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಂಶವನ್ನು ನ್ಯಾಯಾಲಯವು ನಿರ್ಲಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ, ಮಾನಹಾನಿಕರ ಪ್ರಕಟಣೆಯು ಸಹ ಸಂಸ್ಥೆಗಳ ಕಾರ್ಯನಿರ್ವಹಣೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ದಾಖಲಿಸಿದೆ.
ಇದೇ ವೇಳೆ, ಈಗಾಗಲೇ ಪ್ರಕಟವಾಗಿರುವ ಮಾನಹಾನಿಕರ ವಿಷಯಗಳನ್ನು ಕಡ್ಡಾಯವಾಗಿ ತೆಗೆದು ಹಾಕಲು ಸೂಚಿಸಿದ ನ್ಯಾಯಾಲಯವು ಮರು ಇಂಡೆಕ್ಸ್‌ ಮಾಡುವ ಮೂಲಕ ಇದೇ ಸುದ್ದಿಗಳನ್ನು ಪ್ರಕಟಿಸುವುದನ್ನು ಸಹ ನಿರ್ಬಂಧಿಸಿದೆ.
ಹರ್ಷೇಂದ್ರ ಕುಮಾರ ಅವರು ಹೂಡಿರುವ ಮಾನಹಾನಿ ದಾವೆಯಲ್ಲಿ 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡಿಟ್‌ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳನ್ನು ಒಳಗೊಂಡಂತೆ 8,842 ಲಿಂಕ್‌ಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement