
ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮವಾಗಿ ಸೈಟುಗಳನ್ನು ಹಂಚಿಕೆ ಆರೋಪದ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ.
ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾಯಮೂರ್ತಿ ದೇಸಾಯಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ವರದಿ ಸಲ್ಲಿಸಿದರು. ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವ ಸಾಧ್ಯತೆಯಿದೆ. 2024ರ ಜುಲೈ 15ರಂದು ತನಿಖಾ ಆಯೋಗ ರಚಿಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಆದೇಶಿಸಿತ್ತು. ಆನಂತರ ಮತ್ತೆ ನ್ಯಾಯಮೂರ್ತಿ ದೇಸಾಯಿ ಆಯೋಗದ ಕಾಲಾವಕಾಶವನ್ನು ಸರ್ಕಾರ ವಿಸ್ತರಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಮುಡಾ ಹಗರಣವು ರಾಜ್ಯ ರಾಜಕೀಯದಲ್ಲಿ ಬಿರುಗಾಳಿಗೆ ಕಾರಣವಾಗಿತ್ತು. ಇಡೀ ಪ್ರಕರಣದಲ್ಲಿ ಮುಡಾ ನಿಯಮಗಳನ್ನು ಗಾಳಿಗೆ ತೂರಿ ಸೈಟುಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದು ವಿಪಕ್ಷಗಳ ಆರೋಪವಾಗಿದೆ.ಹೀಗಾಗಿ ಸರ್ಕಾರ ವಿಚಾರಣಾ ಆಯೋಗ ರಚಿಸಿತ್ತು. ಹಾಗೂ 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮತ್ತು ಬದಲಿ ನಿವೇಶನಗಳ ಹಂಚಿಕೆ ಕುರಿತ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ