
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆಗಸ್ಟ್ 1) ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದರು. ನಾಳೆ, (ಆಗಸ್ಟ್ 2) ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಇದರೊಂದಿಗೆ ಪ್ರಜ್ವಲ್ ವಿರುದ್ಧ ದಾಖಲಾದ ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣದಲ್ಲಿ ತೀರ್ಪು ಬಂದಿದೆ.

ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು. ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷದ ಕೊನೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು. ಮನೆಕೆಲಸದಾಕೆಯು ಎರಡು ದೂರು ನೀಡಿದ್ದು, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಮತ್ತು ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸೇರಿದಂತೆ ಪ್ರಜ್ವಲ್ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿವೆ.


ನಿಮ್ಮ ಕಾಮೆಂಟ್ ಬರೆಯಿರಿ