ಮೈಸೂರು: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಗೆ ಸಿಲುಕಿ ಅದೃಷ್ಟವಶಾತ್ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆ ಆತನಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಡಾನೆ ಬಸವರಾಜ ಎಂಬವರ ಮೇಲೆ ದಾಳಿ ನಡೆಸಿ ಅವರನ್ನು ತುಳಿದಿತ್ತು. ಗಾಯಗೊಂಡರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜ ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ಅರಣ್ಯ ಇಲಾಖೆ ಕಣ್ತಪ್ಪಿಸಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಹುಡುಕಾಟ ನಡೆಸಿ ಪತ್ತೆ ಮಾಡಿದ ಅರಣ್ಯ ಇಲಾಖೆ ಅವರಿಗೆ 25,000 ರೂ ದಂಡ ವಿಧಿಸಿದೆ ಹಾಗೂ ತಪ್ಪೊಪ್ಪಿಗೆ ಪತ್ರ ಪಡೆದಿದೆ.
ಕಾಡಾನೆ ಜೊತೆಗೆ ಉದ್ಧಟತನ ಪ್ರದರ್ಶಿಸಿದ್ದ 50 ವರ್ಷದ ಆರ್.ಬಸವರಾಜ ಅವರನ್ನು ನಂಜನಗೂಡಿನ ನಿವಾಸದಲ್ಲಿ ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಅಲ್ಲದೆ, ಅವರಿಂದಲೇ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಸಾರುವ ವೀಡಿಯೊ ಮಾಡಿಸಿ ಬಿಡುಗಡೆ ಮಾಡಿಸಿದೆ. ನಾನು ಬಂಕಾಪುರದ ದೇವಾಸ್ಥಾನಕ್ಕೆ ಹೋಗಿದ್ದೆ. ವಾಪಸ್ ಬರುವಾಗ ಮೋಜು ಮಸ್ತಿಗೆ ಕಾಡಾನೆ ಜತೆ ಸೆಲ್ಫೀ ತೆಗೆಯಲು ಮುಂದಾಗಿದ್ದೆ. ಈ ವೇಳೆ ನನ್ನ ಮೇಲೆ ಕಾಡಾನೆ ದಾಳಿ ನಡೆಸಿತು. ನನ್ನ ಪ್ರಾಣ ಉಳಿದಿದ್ದೇ ಹೆಚ್ಚು. ಯಾರು ಕೂಡ ಕಾಡು ಪ್ರಾಣಿಗಳ ಜೊತೆ ಚೆಲ್ಲಾಟ ಆಡಬೇಡಿ. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ. ನನ್ನ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡು ದಂಡ ವಿಧಿಸಿದೆ. ಅದಕ್ಕಿಂತಲೂ ಜೀವ ಉಳಿದಿದ್ದು ಮುಖ್ಯ ಎಂದು ಬಸವರಾಜು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ಘಟನೆ ವಿವರ..
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಕೆಕ್ಕನಹಳ್ಳ ಪ್ರದೇಶದ ಬಳಿ ಕಾಡಾನೆ ತರಕಾರಿ ತಿನ್ನುತ್ತಿದ್ದಾಗ ತಮಿಳುನಾಡಿನ ಮಧು ಮಲೈಯಿಂದ ಬಂಡೀಪುರದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಪ್ರವಾಸಿಗ ಬಸವರಾಜ ಎಂಬವರು ವಾಹನದಿಂದ ಕೆಳಗಿಳಿದು ಆನೆ ಛಾಯಾಚಿತ್ರ ತೆಗೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಕಾಡಾನೆ ಒಮ್ಮೆಲೇ ಅವರ ಮೇಲೆ ದಾಳಿ ಮಾಡಿದೆ. ಬಸವರಾಜು ಅವರನ್ನು ಕಾಡಾನೆ ಅವರನ್ನು ಅಟ್ಟಿಸಿಕೊಂಡು ಹೋಗಿದೆ, ಓಡುವ ರಭಸಕ್ಕೆ ರಸ್ತೆಯಲ್ಲಿ ಬಿದ್ದಿದ್ದಾರೆ. ಆಗ ಅವರನ್ನು ಕಾಡಾನೆ ತುಳಿದಿದೆ. ಕಾಲು, ಕೈ ಹಾಗೂ ಮುಖಕ್ಕೆ ಗಾಯಗಳಾಗಿದೆ. ನಂತರ ಅವರನ್ನು ಕರೆದೊಯು ಕಾರಿನಲ್ಲಿ ಕರೆದೊಯ್ದು ನಂಜನಗೂಡಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ