ಬೆಂಗಳೂರು : ರಾಜ್ಯಾದ್ಯಂತ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಇರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 19ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 15 ಹಾಗೂ 16ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 17, 18 ಹಾಗೂ 19ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಆಗಸ್ಟ್ 15ರಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆಗಸ್ಟ್ 19ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ.


ನಿಮ್ಮ ಕಾಮೆಂಟ್ ಬರೆಯಿರಿ