
ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು ಸೈಲ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಆಗಸ್ಟ್ 13 ಮತ್ತು 14ರಂದು ಶಾಸಕ ಸತೀಶ ಸೈಲ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಕಾರವಾರದ ಜೊತೆಗೆ ಗೋವಾ, ಮುಂಬೈ ಮತ್ತು ನವದೆಹಲಿಯ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಸುಮಾರು 1.41 ಕೋಟಿ ನಗದು ಮತ್ತು ಬ್ಯಾಂಕ್ ಲಾಕರ್‌ನಲ್ಲಿ 6.75 ಕೆ.ಜಿ ಚಿನ್ನಾಭರಣ ಪತ್ತೆಯಾಗಿತ್ತು. ಜೊತೆಗೆ, 14.13 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿತ್ತು. ಹಣಕಾಸು ದಾಖಲೆಗಳು, ಇ-ಮೇಲ್‌ಗಳು, ಆಸ್ತಿ-ಸ್ಥಿರಾಸ್ತಿ ದಾಖಲೆಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅನಾರೋಗ್ಯದ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ಸತೀಶ ಸೈಲ್ ಅವರಿಗೆ ಇತ್ತೀಚೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ನಂತರ ಅವರನ್ನು ವಿಚಾರಣೆಗಾಗಿ ಕರೆದ ಇಡಿ ಅಧಿಕಾರಿಗಳು, ದಿನಪೂರ್ತಿ ಪ್ರಶ್ನಿಸಿದ ಬಳಿಕ ಬಂಧಿಸಿದ್ದಾರೆ. ತನಿಖೆಗೆ ಸಹಕರಿಸದ ಕಾರಣ ಶಾಸಕ ಸೈಲ್‌ರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ ಸೈಲ್ ಆರೋಪಿಯಾಗಿದ್ದಾರೆ. ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆಗೆ ಸಂಬಂಧಿಸಿದ ಹಣಕಾಸು ವಹಿವಾಟುಗಳ ಬಗ್ಗೆ ಇ.ಡಿ. ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಎದುರಿಸುತ್ತಿದ್ದಾರೆ. 024ರ ಅಕ್ಟೋಬರ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸತೀಶ್ ಸೈಲ್ ಸೇರಿದಂತೆ ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ಮತ್ತು 9.6 ಕೋಟಿ ರೂ. ದಂಡ ವಿಧಿಸಿತ್ತು. ಆದರೆ, ಹೈಕೋರ್ಟ್ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ್ದರಿಂದ ಬಿಡುಗಡೆಯಾಗಿದ್ದರು. ಈಗ, ಅಕ್ರಮ ಹಣ ವರ್ಗಾವಣೆ (PMLA) ಕಾಯ್ದೆಯಡಿ ಬಂಧನವಾಗಿದ್ದಾರೆ. ದಾಳಿಯ ವೇಳೆ ದೊರೆತ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಆಧರಿಸಿ ಇಡಿ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ ಎಂದು ಹೇಳಲಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ