ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಮಾಡಿದ್ದ ಮನವಿಯನ್ನು ಬೆಂಗಳೂರಿನ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ.
ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಅದು ತಿಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಜೈಲಿನಲ್ಲಿ ಕನಿಷ್ಠ ಸೌಲಭ್ಯ ಒದಗಿಸಬೇಕೆಂಬ ದರ್ಶನ್ ಅವರ ಮನವಿ ಮಾನ್ಯ ಮಾಡಿರುವ ನ್ಯಾಯಾಲಯವು ಕಾರಾಗೃಹ ಕೈಪಿಡಿಯ ಅನುಸಾರ ಯಾವೆಲ್ಲ ಕನಿಷ್ಠ ಸೌಲಭ್ಯಗಳು ಇವೆಯೋ ಅವೆಲ್ಲವನ್ನೂ ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ವರದಿ ಹೇಳಿದೆ.
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲು ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ, ದಿಂಬು, ಹೊದಿಕೆ ಒದಗಿಸಲು ಮನವಿ ಮಾಡಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಐ ಪಿ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು.
ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಬೇರೆ ಜೈಲುಗಳಿಗೆ ಸ್ಥಳಾಂತರಗೊಳಿಸುವಂತೆ ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಾಸಿಗೆ, ದಿಂಬು ಹಾಗೂ ಬೇಡ್ಶೀಟ್ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿತು.
ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ಹಾಗೂ ವಕೀಲ ಸುನೀಲಕುಮಾರ ವಾದ ಮಂಡಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ ವಾದ ಮಂಡಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ