ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
“ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರ ಪೀಠ ಅಸಮಾಧಾನ ವ್ಯಕ್ತಪಡಿಸಿತು.
ಸೋಮವಾರ (ಸೆಪ್ಟೆಂಬರ್ 22) ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರೆದುರು ಪ್ರಕರಣ ಪ್ರಸ್ತಾಪಿಸಲಾಗಿತ್ತು.
ಬಾನು ಅವರು ದಸರಾ ಉದ್ಘಾಟಿಸುವುದು ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ದೂರಿದ್ದ ಅರ್ಜಿಗಳನ್ನು ಸೆಪ್ಟೆಂಬರ್ 15 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಪ್ರಕರಣದಲ್ಲಿ ಸಂವಿಧಾನದ 25ನೇ ಮತ್ತು 26ನೇ ವಿಧಿಗಳಲ್ಲಿ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಯಾವುದೇ ಭರವಸೆಗಳು ಉಲ್ಲಂಘನೆಯಾಗಿಲ್ಲ ಎಂದು ಉಚ್ಚ ನ್ಯಾಯಾಲಯ ಹೇಳಿತ್ತು.
ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮ ಪಾಲಿಸುವ ವ್ಯಕ್ತಿ ಬೇರೆ ಧರ್ಮದ ಹಬ್ಬಗಳಲ್ಲಿ ಭಾಗವಹಿಸುವುದರಿಂದ ಸಂವಿಧಾನದಡಿಯಲ್ಲಿ ಲಭ್ಯವಿರುವ ಹಕ್ಕು ಉಲ್ಲಂಘನೆಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ