ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಎಚ್‌.ಸಿ. ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಎಡಿಸಿ ಶಿವರಾಜು ಸೇರಿದಂತೆ ಹಿರಿಯ ಅಧಿಕಾರಿಗಳು, ಸಾಹಿತಿಗಳು, ಭೈರಪ್ಪ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು.

ಭೈರಪ್ಪ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು. ಹಲವು ಗಣ್ಯರು ಗೌರವ ಸಮರ್ಪಣೆ ಮಾಡಿದರು ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ನೆರವೇರಿತು. ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಮೊಳಗಿತು. ಸರ್ಕಾರಿ ಗೌರವದ ಬಳಿಕ ತ್ರಿವರ್ಣ ಧ್ವಜ ಹಸ್ತಾಂತರ ಮಾಡಲಾಯಿತು. ಭೈರಪ್ಪನವರ ಮಕ್ಕಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ. ಮಹದೇವಪ್ಪ ತ್ರಿವರ್ಣ ಧ್ವಜವನ್ನು ಹಸ್ತಾಂತರ ಮಾಡಿದರು.

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ಭೈರಪ್ಪನವರ ಪುತ್ರರಾದ ಉದಯಶಂಕರ ಹಾಗೂ ರವಿಶಂಕರ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿ ಅಗ್ನಿಸ್ಪರ್ಶ ಮಾಡಿದರು. ಭೈರಪ್ಪನವರನ್ನು ಮಗಳಂತೆ ಅಕ್ಕರೆಯಿಂದ ನೋಡಿಕೊಂಡ ಕಾದಂಬರಿಕಾರ್ತಿ ಸಹನಾ ವಿಜಯಕುಮಾರ ಕೂಡ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು. ಪತ್ನಿ ಸರಸ್ವತಿ, ಕುಟುಂಬಸ್ಥರು, ಭೈರಪ್ಪನವರ ಸಾಹಿತ್ಯಾಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಅಗಲಿದ ಮೇರು ಸಾಹಿತಿಗೆ ಭಾವಪೂರ್ಣ ವಿದಾಯ ಹೇಳಿದರು.
ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಅಂತಿಮ ನಮನ ಸಲ್ಲಿಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement