ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್ 28ರಿಂದ) ಅಕ್ಟೋಬರ್ 4ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರ ಪರಿಣಾಮದಿಂದ ಮಳೆ ಜೋರಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ಕಲಬುರಗಿ, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ರಾಜ್ಯದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಹರಿಯುವ ಕೃಷ್ಣ ಮತ್ತು ಭೀಮಾ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಅಗತ್ಯ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮಳೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಹಲವರು ಹಳ್ಳಿಗಳು ಜಲಾವೃತಗೊಂಡಿವೆ. ಸುಮಾರು 45 ಮನೆಗಳಿಗೆ ಹಾನಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ.
ಕರ್ನಾಟಕದ ಕರಾವಳಿಯಲ್ಲಿ ಭಾನುವಾರಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಐಎಂಡಿಯ ಮಾಹಿತಿಯಂತೆ ಅರಬ್ಬಿ ಸಮುದ್ರದ ಸಮುದ್ರ ಪ್ರಕ್ಷುಬ್ಧವಾಗಿರಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ