
ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಅರ್ಜಿ ಆಲಿಸಿದ ಪೀಠವು ತಿಮರೋಡಿ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿತು. ಅಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.
ನನ್ನ ಅಹವಾಲು ಆಲಿಸದೆ ಸಹಾಯಕ ಆಯುಕ್ತರು ಏಕಾಏಕಿ ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಹೇಶ ಶೆಟ್ಟಿ ತಿಮರೋಡಿ ಮನವಿ ಮಾಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ