ಬೆಂಗಳೂರು : ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿಕೆಲದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಅಪ್ಪಳಿಸಬಹುದು ಎಂದು ಎಚ್ಚರಿಕೆ ನೀಡಿದೆ. ಇದರ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಕೊಡಗು, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಪ್ರಮುಖವಾಗಿ ಬುಧವಾರ (ಅಕ್ಟೋಬರ್ 22) ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದ 24 ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಹಗುರ ಮಳೆಯಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ