ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್ 28ರ ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಮಾಡಲಿದ್ದಾರೆ. ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಗೀತಾ ಮಂದಿರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ ಎನ್ನಲಾಗಿದೆ.
ಈ ಹಿಂದೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. 2008ರಲ್ಲಿ ಮೋದಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಇದೀಗ ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲನೇ ಭೇಟಿಯಾಗಿದ್ದು, ಒಟ್ಟಾರೆಯಾಗಿ 2ನೇ ಭೇಟಿಯಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ