ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ ಕಾರಣ ಹಾಗೂ ತಮ್ಮ ಬೆಳೆಯನ್ನು ಕಾರ್ಖಾನೆಯ ಗೋದಾಮಿಗೆ ಕೊಂಡೊಯ್ಯುತ್ತಿದ್ದ ರೈತರ ಟ್ರ್ಯಾಕ್ಟರ್ ಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಒಯ್ಯುತ್ತಿದ್ದ ಟ್ರ್ಯಾಕ್ಟರ್ ಗಳನ್ನು ರಸ್ತೆ ನಡುವೆ ತಡೆದ ಕಬ್ಬು ಬೆಳೆಗಾರರು, ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು. ನಂತರ ಸಮೀರವಾಡೆ ಗೋದಾವರಿ ಕಾರ್ಖಾನೆಗೆ ಮುತ್ತಿಗೆ ಹಾಕಲು ತೆರಳಿದ ರೈತರು ಅಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳು ಸಾಲಾಗಿ ನಿಂತಿದ್ದನ್ನು ನೋಡಿ ಕೆರಳಿದ್ದಾರೆ. ಕಾರ್ಖಾನೆಯ ಆವರಣದಲ್ಲಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಸುಮಾರು 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸರ್ಕಾರ ನಿಗದಿಪಡಿಸಿರುವ ದರಕ್ಕೆ ಒಪ್ಪಿಕೊಂಡು ಕಬ್ಬನ್ನು ಕಾರ್ಖಾನೆಗೆ ತಂದಿದ್ದೆವು. ಆದರೆ, ಟ್ರ್ಯಾಕ್ಟರ್‌ಗಳಿಗೆ ಬೆಚ್ಚಿ ಹಚ್ಚಿದ್ದಾರೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರವು ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಕಾರ್ಖಾನೆಗಳಿಗೆ ಕಬ್ಬು ಪೂರೈಸಲು ಸಿದ್ಧರಿದ್ದ ಇತರ ರೈತರ ನಿರ್ಧಾರದಿಂದ ಅಸಮಾಧಾನಗೊಂಡಿದ್ದಾರೆ. ಗುರುವಾರ ಮುಧೋಳ ತಾಲೂಕಿನಲ್ಲಿ ಬಂದ್‌ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಮೀರವಾಡಿಯ ಕಡೆಗೆ ಮೆರವಣಿಗೆ ಆರಂಭಿಸಿದರು. ಎರಡೂ ಕಡೆಯ ರೈತರ ನಡುವೆ ವಾಗ್ವಾದ ನಡೆಯಿತು ಎಂದು ಹೇಳಲಾಗಿದೆ.
ವಾಗ್ವಾದದ ನಂತರ ಕೆಲವು ರೈತರು ಮೊದಲು ಪರಸ್ಪರ ಕಲ್ಲು ತೂರಾಟ ನಡೆಸಿದರು. ನಂತರ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಟ್ರ್ಯಾಕ್ಟರ್ ಸುಟ್ಟುಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನಿಖರವಾದ ಸಂಖ್ಯೆಯ ಟ್ರ್ಯಾಕ್ಟರ್‌ಗಳು ಸುಟ್ಟುಹೋಗಿವೆ ಎಂಬ ದೃಢೀಕರಣವಿಲ್ಲ. ಆದರೆ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲಿಯೇ ಇದ್ದ ಹಲವಾರು ಬೈಕ್ ಗಳು ಸಹ ಸುಟ್ಟುಹೋಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಕೂಡ ಸ್ಥಳಕ್ಕೆ ಧಾವಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ