ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ ಎಂದು ಅದರಲ್ಲಿ ಬರೆದಿದ್ದಾರೆ. ಹಾಗೂ ಇಬ್ಬರೂ ಉಪಹಾರ ಸೇವಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ ಸಹ ಪೋಸ್ಟ್ ಮಾಡಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು ಎಂದು ಹೇಳಿ ಫೋಟೋ ಹಂಚಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉಪಾಹಾರ ಸಭೆ ನಡೆಸಲಾಯಿತು. ಕರ್ನಾಟಕದ ಆದ್ಯತೆಗಳು ಮತ್ತು ಮುಂದಿನ ದಾರಿಯ ಬಗ್ಗೆ ಉತ್ಪಾದಕ ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.
ತೀವ್ರ ಚರ್ಚೆಗೆ ಕಾರಣವಾಗಿರುವ ಕುರ್ಚಿ ಗುದ್ದಾಟದಲ್ಲಿ ಈಗ ಹೈಕಮಾಂಡ್ ಮಧ್ಯಪ್ರವೇಶಿಸಿದ್ದು ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಹೈಕಮಾಂಡ್ ರವಾನಿಸಿದ ನಂತರ ಮುಖ್ಯಮಂತ್ರಿಗಳ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ.ಮುಖ್ಯಮಂತ್ರಿ ಹುದ್ದೆಯ ಬಿಕ್ಕಟ್ಟಿನ ಕುರಿತು ತನ್ನ ನಿರ್ಧಾರ ಪ್ರಕಟಿಸುವ ಮುನ್ನ ಮುನ್ನ ಉಭಯ ನಾಯಕರು ಪರಸ್ಪರ ಮಾತುಕತೆ ನಡೆಸಿ ಹೊಂದಾಣಿಕೆಗೆ ಪ್ರಯತ್ನ ನಡೆಸಲಿ ಎಂಬ ಉದ್ದೇಶದಿಂದ ಹೈಕಮಾಂಡ್ ಈ ಸೂಚನೆ ನೀಡಿದ್ದು, ಸೂಚನೆ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ ನಡೆದಿದೆ. ಈ ಉಪಾಹಾರ ಸಭೆಯಲ್ಲಿ ‘ಶಿವಕುಮಾರ-ಸಿದ್ದರಾಮಯ್ಯ ರಾಜಿ ಸೂತ್ರ’ ಎಂದು ಕರೆಯಲಾಗುತ್ತಿರುವ ಒಪ್ಪಂದದ ವಿವರಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ನಮ್ಮ ಮಧ್ಯೆ ಯಾವುದೇ ಗೊಂದಲ ಇಲ್ಲ….
ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕಾಂಗ್ರೆಸ್ನಲ್ಲಿ (Congress) ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ಇವತ್ತಿನ ವರೆಗೆ ನಮ್ಮ ಮಧ್ಯೆ ಯಾವುದೇ ಗೊಂದಲಗಳಿರಲಿಲ್ಲ. ಮುಂದೆಯೂ ಇದೇ ತರ ಮುಂದುವರಿಯಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶನಿವಾರ ತಿಳಿಸಿದರು. ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹೈಕಮಾಂಡ್ ನಾಯಕರು ಕರೆ ಮಾಡಿ ಗೊಂದಲ ತಿಳಿಗೊಳಿಸಲುವ ಕೆಲಸ ಮಾಡಿ ಎಂದು ಸೂಚಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಈ ಹಿಂದೆಯೂ ಸ್ಪಷ್ಟಪಡಿಸಿದ್ದೆ. ನಮ್ಮ ಮಧ್ಯೆ ಯಾವುದೇ ಗೊಂದಲ ಇಲ್ಲ. ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ನಾನು ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಕೆಲ ಶಾಸಕರು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿದ್ದರು. ನಾಯಕತ್ವದ ವಿರುದ್ಧವಾಗಿ ಶಾಸಕರು ದೆಹಲಿಗೆ ಹೋಗಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ವಿಧಾನಸಭೆ ಅಧಿವೇಶನದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ನಮ್ಮದು ಒಂದೇ ಗುಂಪು, ಹೈಕಮಾಂಡ್ ಗುಂಪು ಎಂದು ಡಿಕೆ ಶಿವಕುಮಾರ ತಿಳಿಸಿದರು.
ನಾನು, ಸಿಎಂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ತುಸು ದುರ್ಬಲವಾಗಿದೆ ನಮಗೆ ಗೊತ್ತು. ಆದರೆ ಕರ್ನಾಟಕದಲ್ಲಿ ಹಾಗಿಲ್ಲ. 2028ಕ್ಕೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ ಒಮ್ಮತದಿಂದ ಆಡಳಿತ ಮಾಡಿಕೊಂಡು ಹೋಗುತ್ತೇವೆ ಎಂದು ಡಿಕೆ ಶಿವಕುಮಾರ ಹೇಳಿದರು.
ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತ್ತು 2028 ರ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ” ಎಂದು ಶಿವಕುಮಾರ ಹೇಳಿದರು.


ನಿಮ್ಮ ಕಾಮೆಂಟ್ ಬರೆಯಿರಿ