ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ(ಡಿಸೆಂಬರ್ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ.
ಪ್ರಮುಖವಾಗಿ ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ಕ್ಕೆ ಒಪ್ಪಿಗೆ ನೀಡಿದ್ದು, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ವಿಧೇಯಕ ತರಲು ತೀರ್ಮಾನಿಸಿದೆ.
ಜನಾಂಗೀಯ ನಿಂದನೆ, ಭಾಷೆ, ಜನ್ಮಸ್ಥಳ, ಜಾತಿ, ಧರ್ಮ ಆಧರಿಸಿ ದ್ವೇಷದ ಅಪರಾಧ ಮತ್ತು ದ್ವೇಷ ಭಾಷಣ ಇತ್ಯಾದಿ ಈ ವಿಧೇಯಕದಡಿ ಶಿಕ್ಷಾರ್ಹ ಅಪರಾಧವಾಗಿದೆ.ಪ್ರಸ್ತಾಪಿತ ಮಸೂದೆ ಅಡಿ 3 ವರ್ಷ ಶಿಕ್ಷೆ ವಿಧಿಸುವ ನಿಯಮ ರೂಪಿಸಲಾಗಿದೆ. ಈ ಪ್ರಸ್ತಾಪಿತ ಮಸೂದೆಯಲ್ಲಿ ಸಾಮಾಜಿಕ ಮಾಧ್ಯಮ ಕಂಪನಿಗಳು, ಸರ್ಚ್ ಇಂಜಿನ್‌ಗಳು, ಟೆಲಿಕಾಂ ಆಪರೇಟರ್‌ಗಳು, ಆನ್‌ಲೈನ್ ಮಾರುಕಟ್ಟೆ ಸ್ಥಳಗಳು ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು ಸೇರಿ ಡಿಜಿಟಲ್ ಮಧ್ಯವರ್ತಿಗಳು ಪೋಸ್ಟ್ ಮಾಡುವ ವಿಷಯಕ್ಕೆ ಹೊಣೆಗಾರರಾಗಿರುತ್ತಾರೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಖಾತೆ ಸಚಿವರಾದ ಎಚ್.ಕೆ. ಪಾಟೀಲ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ – 2025, ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ – 2025, ಕರ್ನಾಟಕ ಒಳನಾಡು ನೌಕೆ ನಿಯಮಗಳು – 2025, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ – 2025, ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ – 2025 ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, 1777 ಎಕರೆ ಡಿನೋಟಿಫೈ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
2025 ಜುಲೈ 15ರಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ರೈತರ 1777ಎಕರೆ ಡಿನೋಟಿಫೈಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೆ ಅವಳಿ ಸುರಂಗ ರಸ್ತೆ ನಿರ್ಮಾಣಕ್ಕೆ ಪೂರಕವಾಗಿ ಎಲಿವೇಟೆಡ್ ಕಾಮಗಾರಿಗಳ ನಿರ್ಮಾಣ ಮಾಡಲು 2215 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ” ಎಂದರು.
ಅಲ್ಲದೆ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025″ದ ಪರಿಷ್ಕೃತ ವೆಚ್ಚ ರೂ.100.70 ಕೋಟಿಗಳಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಮೆಕ್ಕೆಜೋಳದ ಬಗ್ಗೆ ರೈತರಿಗೆ ಅನುಕೂಲವಾಗಲು ಮೆಕ್ಕೆ ಜೋಳವನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಪ್ರಯತ್ನಗಳನ್ನು ನಡೆಸುತ್ತಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮಾರುಕಟ್ಟೆಯಲ್ಲಿ ಸ್ಥಿರತೆ ಸಾಧ್ಯವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ