ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ, ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಶುಕ್ರವಾರ (ಡಿಸೆಂಬರ್ 19) ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಜೋರಾಗಿ ಬೀಸಲಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ  ಕನಿಷ್ಠ ತಾಪಮಾನ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಮುಂಜಾನೆ ಮತ್ತು ರಾತ್ರಿ ಚಳಿ ಇರಲಿದ್ದು, ಹಗಲಿನಲ್ಲಿ ಬಿಸಿಲು ಇರಲಿದೆ ಎಂದು ತಿಳಿಸಿದೆ.
ಬೀದರ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಶೀತಗಾಳಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನವು ಗಣನೀಯವಾಗಿ ಕುಸಿಯಲಿದ್ದು, ಮುಂಜಾನೆ ಮತ್ತು ರಾತ್ರಿಯ ಸಮಯದಲ್ಲಿ ಚಳಿಯ ತೀವ್ರತೆ ಹೆಚ್ಚು ಇರಲಿದೆ ಎಂದು ತಿಳಿಸಲಾಗಿದೆ.
ಅಲ್ಲದೆ,  ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಚಳಿ ಪ್ರಮಾಣ ಹೆಚ್ಚಾಗಲಿದೆ.  ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ವಾತಾವರಣ ಇರಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಚಳಿ ಇರಲಿದೆ ಎಂದು ಹೇಳಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement