ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿ : ಡಾ. ಪರಮೇಶ್ವರ

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಜಗದೇವ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್‌ಐಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಪೊಲೀಸರು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ 
 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ/ಸಿಬ್ಬಂದಿ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು/ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಎಫ್. ಐ. ಆರ್ ದಾಖಲಿಸಿ,   ಸಸ್ಪೆಂಡ್‌ ಮಾಡಲಾಗಿದ್ದು, ಪ್ರಕರಣ ಸಾಬೀತಾದರೆ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement