ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಮತ್ತೆ ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ಸಹಾಯಕ ಆಯುಕ್ತರು ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಿದ್ದರು. ಈ ನೋಟಿಸ್‌ಗೆ ಮಹೇಶ ಶೆಟ್ಟಿ ತಿಮರೋಡಿ ಅವರು ವಕೀಲರ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಸಹಾಯಕ ಆಯುಕ್ತರು ಮತ್ತೆ ತಿಮರೋಡಿ ವಿರುದ್ದ ಗಡಿಪಾರು ಆದೇಶ ಮಾಡಿದ್ದಾರೆ. ತಮ್ಮ ಹಿಂದಿನ ಆದೇಶವನ್ನು ಮಾರ್ಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಕಾಲ ಗಡೀಪಾರು ಮಾಡಿ ಆದೇಶ ಮಾಡಿದ್ದಾರೆ.
ಆದೇಶ ಪ್ರತಿ ಹಿಡಿದು ಮಹೇಶ ಶೆಟ್ಟಿಯ ಉಜಿರೆ ಬಳಿಯ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಇಂದು, ಗುರುವಾರ ಬೆಳಗ್ಗೆ ತೆರಳಿದ್ದಾರೆ. ಆದರೆ, ಆದರೆ, ಮಹೇಶ ಶೆಟ್ಟಿ ಪೊಲೀಸರು ಮನೆ ತಲುಪುವ ಮೊದಲೇ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದ್ದು, ಬಳಿಕ ಮನೆಗೆ ನೋಟಿಸ್ ಅಂಟಿಸಿ ಪೊಲೀಸರು ವಾಪಸಾಗಿದ್ದಾರೆ ಎಂದು ಹೇಳಲಾಗಿದೆ.
ಈ ಹಿಂದೆ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಗಡಿಪಾರಿ ಆದೇಶವನ್ನು ರದ್ದು ಮಾಡಿ, ಸೆಕ್ಷನ್ ಸರಿಪಡಿಸಿ ಹೊಸ ಆದೇಶ ನೀಡುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಸೂಚನೆ ನೀಡಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ