ನ್ಯಾಷನಲ್ ಹೆರಾಲ್ಡ್ ಪ್ರಕರಣ ; ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜಾರಿ ನಿರ್ದೇಶನಾಲಯ (ED) ಈಗ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.
ಈ ಅರ್ಜಿಯು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಲೈವ್‌ ಲಾ ವರದಿ ಮಾಡಿದೆ. ಡಿಸೆಂಬರ್ 16 ರಂದು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌ನಲ್ಲಿ ಇ.ಡಿ ಪ್ರಶ್ನಿಸಿದೆ.

ಪಿಎಂಎಲ್‌ಎ (PMLA) ಕಾಯ್ದೆಯಡಿ ನಿಗದಿಪಡಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ (FIR) ದಾಖಲಾಗಿಲ್ಲ ಎಂಬ ಕಾರಣ ನೀಡಿ, ಇ.ಡಿ ಸಲ್ಲಿಸಿದ್ದ ದೂರನ್ನು ವಿಚಾರಣಾ ನ್ಯಾಯಾಲಯವು ವಜಾಗೊಳಿಸಿತ್ತು. ಈ ಪ್ರಕರಣವು ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಆಧರಿಸಿದೆಯೇ ಹೊರತು ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿದ್ದಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ಪ್ರಕರಣದ ಹಿನ್ನೆಲೆ:
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕರಾದ ‘ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್’ (AJL) ಅನ್ನು ‘ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್’ (YIL) ಸ್ವಾಧೀನಪಡಿಸಿಕೊಂಡ ವಿಚಾರದಿಂದ ಈ ವಿವಾದ ಉಂಟಾಗಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

2010 ರಲ್ಲಿ ಕೇವಲ ಕಾಂಗ್ರೆಸ್‌ನಿಂದ ₹50 ಲಕ್ಷಕ್ಕೆ ಎಜೆಎಲ್‌ನ ಸಾಲಗಳನ್ನು ಸ್ವಾಧೀನಪಡಿಸಿಕೊಂಡಿತು. ₹50 ಲಕ್ಷ ಪಾವತಿಸುವ ಮೂಲಕ ಯಂಗ್ ಇಂಡಿಯನ್ ಸಂಸ್ಥೆಯು ಎಜೆಎಲ್ ಸಂಸ್ಥೆಯ ಸಾಲಗಳನ್ನು ತನ್ನದಾಗಿಸಿಕೊಂಡಿತು. ಆ ಮೂಲಕ ₹2,000 ಕೋಟಿಗೂ ಅಧಿಕ ಮೌಲ್ಯದ ಎಜೆಎಲ್ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸಿತು.ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಹುಪಾಲು ಷೇರುಗಳನ್ನು ಹೊಂದಿದ್ದು, ಪಕ್ಷದ ಹಣವನ್ನು ಬಳಸಿಕೊಂಡು ವೈಯಕ್ತಿಕ ಲಾಭಕ್ಕಾಗಿ ಈ ಆಸ್ತಿಗಳನ್ನು ಹಸ್ತಾಂತರಿಸಿಕೊಳ್ಳಲಾಗಿದೆ ಎಂಬುದು ಇ.ಡಿ ಆರೋಪವಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement