ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಚಳಿ ಬೀಳುತ್ತಿದ್ದು, ಸೋಮವಾರವೂ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ (Karnataka Districts) ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿದ್ದು, ಬೀದರಿನಲ್ಲಿ ದಾಖಲೆಯ ಮಟ್ಟದ ಚಳಿ ದಾಖಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನ ಸಮಯದಲ್ಲಿ ಮಂಜು ಮತ್ತು ಶೀತಗಾಳಿ ಸಾಮಾನ್ಯವಾಗಿದೆ. ಡಿಸೆಂಬರ್ 22ರಂದು ಉತ್ತರ ಒಳನಾಡಿನ ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಸಂಜೆಯಿಂದ ಶೀತ ಗಾಳಿ ಬೀಳುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಅಂಕಿ-ಅಂಶಗಳ ಪ್ರಕಾರ, ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆ ವರೆಗೆ ಬೀದರಿನಲ್ಲಿ ಕನಿಷ್ಠ 8.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಧಾರವಾಡ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಗದಗ, ಹಾವೇರಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಚಿತ್ರದುರ್ಗ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ.


ನಿಮ್ಮ ಕಾಮೆಂಟ್ ಬರೆಯಿರಿ