ಮುಂಬೈ: ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಸನ್‌ಬರ್ನ್ ಫೆಸ್ಟಿವಲ್‌ಗೆ ತೆರಳುತ್ತಿದ್ದಾಗ, ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿದ್ದ ಚಾಲಕನೊಬ್ಬ ಚಲಾಯಿಸುತ್ತಿದ್ದ ವಾಹನವು ನೋರಾ ಫತೇಹಿ ಪ್ರಯಾಣಿಸುತ್ತಿದ್ದ ಕಾರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನೋರಾ ಅವರ ತಲೆ ಕಿಟಕಿ ಗಾಜಿಗೆ ಬಡಿದು ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ನೋರಾ ಅವರು ಗಂಭೀರ ಗಾಯಗಳಿಂದ ಪಾರಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಈ ಸಂಬಂಧ ಆರೋಪಿ ಚಾಲಕನನ್ನು ಬಂಧಿಸಿ, ಆತನ ವಿರುದ್ಧ ಅಜಾಗರೂಕ ಚಾಲನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡಿರುವ ನೋರಾ ಫತೇಹಿ, “ಅದೊಂದು ಅತ್ಯಂತ ಭೀಕರ ಮತ್ತು ಭಯಾನಕ ಕ್ಷಣವಾಗಿತ್ತು. ಮದ್ಯದ ಅಮಲಿನಲ್ಲಿದ್ದ ಚಾಲಕ ನನ್ನ ಕಾರಿಗೆ ಡಿಕ್ಕಿ ಹೊಡೆದಾಗ ಅದರ ತೀವ್ರತೆಗೆ ನಾನು ಕಾರಿನೊಳಗೆ ಎಸೆಯಲ್ಪಟ್ಟೆ ಮತ್ತು ನನ್ನ ತಲೆ ಗಾಜಿಗೆ ಬಡಿಯಿತು. ಸ್ವಲ್ಪ ಸಮಯ ನೋವು ಅನುಭವಿಸಬೇಕಾಗಿದೆ, ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದೇನೆ” ಎಂದು ಹೇಳಿದ್ದಾರೆ. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ