ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ: ಕಲ್ಯಾಣ ಕರ್ನಾಟಕದ ಹಿರಿಯ ನಾಯಕ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
 ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ರಾತ್ರಿ 10:50ರ ಸುಮಾರಿಗೆ ನಿಧನರಾಗಿದ್ದಾರೆ.
103 ವರ್ಷಗಳ ಕಾಲ ಸಾರ್ಥಕ ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಬೀದರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಬೀದರ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ(ಬಿ) ಗ್ರಾಮದಲ್ಲಿ 1923ರ ಜನವರಿ 8ರಂದು ಜನಿಸಿದ ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ನಂತರ 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, ಆ ನಂತರದಲ್ಲಿ 4 ಬಾರಿ ಶಾಸಕರಾಗಿ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ,  ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಅವರು 1999ರಲ್ಲಿ ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದರು. 2005ರಲ್ಲಿ ಮರು ಆಯ್ಕೆಯಾಗಿ 2011ರವರೆಗೆ 12 ವರ್ಷ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.
 ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.  ಹೈದರಾಬಾದ್‌ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು.
ಬಾಲ್ಯದಲ್ಲಿ ತೀವ್ರ ಅನಾರೋಗ್ಯಪೀಡಿತರಾದಾಗ ಮುಚಳಂಬದ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳಿಂದ ಯೋಗ ಕಲಿತು ನಿತ್ಯ ಯೋಗ, ಪ್ರಾಣಾಯಾಮ ಮಾಡುತ್ತಿದ್ದರು. ಅವರು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರ ಪರಮ ಭಕ್ತರಾಗಿದ್ದರು. ಭೀಮಣ್ಣ ಖಂಡ್ರೆ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಪಟ್ಟದ್ದೇವರು ಭೀಮಣ್ಣ ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.
 ಶನಿವಾರ ಬೆಳಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement