ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಭದ್ರತಾ ತಪಾಸಣೆಯ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 19, 2026 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸಲು ಮಹಿಳೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಮಿಗ್ರೇಷನ್ ಪ್ರಕ್ರಿಯೆ ಮುಗಿಸಿದ ನಂತರ, ವಿಮಾನ ನಿಲ್ದಾಣದ ಸಿಬ್ಬಂದಿ ಅಫಾನ್ ಅಹ್ಮದ್ ಎಂಬಾತ ಟಿಕೆಟ್ ಮತ್ತು ಬ್ಯಾಗೇಜ್ ತಪಾಸಣೆ ಮಾಡುವ ನೆಪದಲ್ಲಿ ಮಹಿಳೆಯನ್ನು ತಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ, ಮಹಿಳೆಯ ಬ್ಯಾಗ್‌ನಿಂದ ‘ಬೀಪ್’ ಶಬ್ದ ಬರುತ್ತಿದೆ ಎಂದು ಸುಳ್ಳು ಹೇಳಿ, ಪ್ರತ್ಯೇಕವಾಗಿ ತಪಾಸಣೆ ನಡೆಸಬೇಕು ಎಂದು ನಂಬಿಸಿದ್ದಾನೆ.
ಕೌಂಟರ್‌ನಲ್ಲಿ ವಿವರವಾಗಿ ತಪಾಸಣೆ ನಡೆಸಿದರೆ ವಿಮಾನ ವಿಳಂಬವಾಗಬಹುದು ಎಂದು ಹೆದರಿಸಿ, ವೈಯಕ್ತಿಕ ತಪಾಸಣೆಗಾಗಿ ಮಹಿಳೆಯನ್ನು ಪುರುಷರ ಶೌಚಾಲಯದ ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಭದ್ರತಾ ತಪಾಸಣೆಯ ನೆಪದಲ್ಲಿ ಮಹಿಳೆಯ ದೇಹವನ್ನು ಅಸಭ್ಯವಾಗಿ ಸ್ಪರ್ಶಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಮಹಿಳೆ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ತಂಡ ಆರೋಪಿಯನ್ನು ವಶಕ್ಕೆ ಪಡೆದು ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖಾಧಿಕಾರಿಗಳು ವಿಮಾನ ನಿಲ್ದಾಣದ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು, ಇದು ದೂರುದಾರರು ವಿವರಿಸಿದ ಘಟನೆಗಳ ಅನುಕ್ರಮವನ್ನು ದೃಢಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಮಹಿಳೆಯ ದೂರಿನ ಮೇರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಸ್ತುತ ಪ್ರಕರಣದ ತನಿಖೆ ಮುಂದುವರಿದಿದೆ.


ನಿಮ್ಮ ಕಾಮೆಂಟ್ ಬರೆಯಿರಿ