ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಸಚಿವ ಕಡನ್ನಪಲ್ಲಿ ರಾಮಚಂದ್ರನ್ ಅವರು ಭಾಷಣ ಮಾಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.
ಕಣ್ಣೂರಿನ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸಚಿವರು ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತಲೆಸುತ್ತು ಕಾಣಿಸಿಕೊಂಡಿದ್ದು, ವೇದಿಕೆಯ ಮೇಲೆಯೇ ಕುಸಿದು ಬಿದ್ದರು. ತಕ್ಷಣವೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಚಿವರ ನೆರವಿಗೆ ಧಾವಿಸಿ, ಅವರು ಕೆಳಗೆ ಬೀಳದಂತೆ ಹಿಡಿದುಕೊಂಡರು.
ಕೆಲವೇ ಕ್ಷಣಗಳಲ್ಲಿ ಚೇತರಿಸಿಕೊಂಡ ಸಚಿವರು, ನಂತರ ಅಲ್ಲಿ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡಿ, “ತಲೆಸುತ್ತು ಬಂದಿದ್ದರಿಂದ ಹೀಗಾಯಿತು, ಆತಂಕ ಪಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ತಾವೇ ನಡೆದುಕೊಂಡು ಹೋಗಿ ಆಂಬ್ಯುಲೆನ್ಸ್ ಏರಿದ್ದು ಅವರ ಬೆಂಬಲಿಗರು ಮತ್ತು ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ.
81 ವರ್ಷದ ಹಿರಿಯ ನಾಯಕರಾದ ರಾಮಚಂದ್ರನ್ ಅವರು ಕಣ್ಣೂರು ಮೂಲದವರಾಗಿದ್ದು, ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದಾರೆ. 1971ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇ.ಕೆ. ನಯನಾರ್ ಅವರಂತಹ ಪ್ರಭಾವಿ ನಾಯಕರನ್ನು ಸೋಲಿಸುವ ಮೂಲಕ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ಪ್ರಸ್ತುತ ಮುಖ್ಯಮಂತ್ರಿಗಳ ಕಚೇರಿಯು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಸಚಿವರಿಗೆ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಮತ್ತು ಅಗತ್ಯ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement