ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ : 16 ಕಾರ್ಮಿಕರ ದುರ್ಮರಣ

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅಸ್ಸಾಂ ಮೂಲದ ಕನಿಷ್ಠ 16 ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗಣಿಯೊಳಗೆ ಇನ್ನೂ ಹಲವಾರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈನ್ತಿಯಾ ಹಿಲ್ಸ್ ಜಿಲ್ಲೆಯ ಥಾಂಗ್ಸ್ಕು ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಶಕುಮಾರ ತಿಳಿಸಿದ್ದಾರೆ. ಇದುವರೆಗೆ 16 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿಲ್ಲಾಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ವಿಪತ್ತು ಸ್ಪಂದನಾ ಪಡೆಯ (SDRF) ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ಗಣಿಯು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿತ್ತು ಎನ್ನಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೇಘಾಲಯದಲ್ಲಿ ಪರಿಸರ ಹಾನಿ ಮತ್ತು ಸುರಕ್ಷತೆಯ ದೃಷ್ಟಿಯಿಂದ 2014 ರಿಂದಲೇ ‘ರ್ಯಾಟ್ ಹೋಲ್’ (Rat-hole) ಗಣಿಗಾರಿಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಮತ್ತು ಸುಪ್ರೀಂ ಕೋರ್ಟ್ ನಿಷೇಧಿಸಿವೆ. ಆದರೂ ಇಂತಹ ಕಿರಿದಾದ ಸುರಂಗಗಳ ಮೂಲಕ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ಮುಖ್ಯಮಂತ್ರಿಗಳಿಂದ ತನಿಖೆಗೆ ಆದೇಶ
ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. “ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ಪರವಾಗಿ ನಾನಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ,” ಎಂದು ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ಕಚೇರಿಯಿಂದ ಪರಿಹಾರ ಘೋಷಣೆ
ಪ್ರಧಾನಮಂತ್ರಿ ಕಾರ್ಯಾಲಯವು (PMO) ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರವನ್ನು ಘೋಷಿಸಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement