ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ (D Roopa) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ಅವರು ತನ್ನ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ” ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಆಧರಿಸಿ ಡಿ ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿದ್ದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.
ರೂಪಾ ಹೂಡಿರುವ ಮಾನಹಾನಿ ಪ್ರಕರಣದ ಸಂಬಂಧ ಜನವರಿ 13ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಶನಿವಾರ ಪ್ರಕಟಿಸಿತು.


ನಿಮ್ಮ ಕಾಮೆಂಟ್ ಬರೆಯಿರಿ