ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, ಶಾಸಕ ಚಂದ್ರು ಲಮಾಣಿ ಮತ್ತು ಇಬ್ಬರು ಪಿಎಗಳು ಬಲೆಗೆ ಬಿದ್ದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರಿಗೆ ಸೇರಿರುವ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ.
ಸಂಕಧಾಳ ಗ್ರಾಮದ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ಸುಮಾರು 1 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಂಬಂಧಿಸಿ ಗುತ್ತಿಗೆದಾರ ವಿಜಯ ಪೂಜಾರ ಅವರ ಬಳಿ 11 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಹಣವನ್ನು ಪಾವತಿಸಲು ಸಾಧ್ಯವಾಗದೆ, ದೂರುದಾರರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದರು, ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಲೆ ಬೀಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ತಂಡ ದಾಳಿ ನಡೆಸಿ ಆರೋಪಿಗಳು 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಂಧಿಸಿದ್ದಾರೆ. ಹಣವನ್ನು ಸ್ವೀಕರಿಸುವ ಕ್ಷಣದಲ್ಲೇ ಅಧಿಕಾರಿಗಳು ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿದ್ದ ದಾಖಲೆಗಳು ಹಾಗೂ ನಗದು ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
ಪ್ರಕರಣ ಸಂಬಂಧ ಶಾಸಕರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಮಾಣಿ ಅವರನ್ನೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ