
ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಭಾರತದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿಲಾಗಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಈ ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೆ.27ರವರೆಗೂ ಗಾಳಿ, ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಫೆ.23 ಮತ್ತು 24ರಂದು ಒಣಹವೆ ಮುಂದುವರಿಯಲಿದೆ. ಫೆ.24 ಮತ್ತು ಫೆ.25ರಂದು ಕರಾವಳಿಯಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದೂ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ