ಶಿವಮೊಗ್ಗ : ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾದ ಘಟನೆ ಇಂದು ಹುಲಿಕಲ್ ಘಾಟಿಯ ಫಾಲ್ಸ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.
ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಹೋಗುತ್ತಿದ್ದಾಗ ತೀವ್ರ ತಿರುವುಗಳಿರುವ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಇಂಜಿನ್ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಊಹಿಸಲಾಗಿದೆ.
ಘಟನೆ ಸಂಭವಿಸಿದ ವೇಳೆ ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ, ವಾಹನ ಅಗ್ನಿಗಾಹುತಿಯಾಗಿದೆ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ, ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಶಿವಮೊಗ್ಗ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ