ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ. ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧವನ್ನು ತಾಂತ್ರಿಕವಾಗಿ ಹೇಗೆ ಜಾರಿಗೆ ತರಲಾಗುತ್ತದೆ ಎಂಬುದು ಸರ್ಕಾರದ ಮುಂದಿರುವ ಸವಾಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ