ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ

ನವದೆಹಲಿ: ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ಇಂಧನ ಬಿಕ್ಕಟ್ಟನ್ನು ಎದುರಿಸಲು ಮತ್ತು ಎಲ್‌ಪಿಜಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬುಕ್ಕಿಂಗ್‌ ಅವಧಿಯನ್ನು ಈಗಿರುವ 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಯಾಕೆಂದರೆ ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ವಾಣಿಜ್ಯ ಅಥವಾ ಕೈಗಾರಿಕಾ ಬಳಕೆಯ ಬದಲಿಗೆ, ಗೃಹಬಳಕೆಯ ಎಲ್‌ಪಿಜಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಎಲ್ಲಾ ತೈಲ ಶುದ್ಧೀಕರಣ ಘಟಕಗಳಿಗೆ (Refineries) ಸೂಚಿಸಲಾಗಿದೆ.

ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ‘ಹಾರ್ಮುಜ್ ಜಲಸಂಧಿ’ಯನ್ನು ಬಂದ್ ಮಾಡಿರುವುದು ಜಾಗತಿಕವಾಗಿ ತೈಲ ಬೆಲೆ ಏರಿಕೆಯ ಆತಂಕ ಮೂಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಯುರೋಪಿಯನ್ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಈ ಮಾರ್ಗವನ್ನು ನಿರ್ಬಂಧಿಸಲಾಗಿದೆ ಎಂದು ಇರಾನ್ ಹೇಳಿದ್ದರೂ, ಸದ್ಯಕ್ಕೆ ಪೂರೈಕೆ ಸಹಜ ಸ್ಥಿತಿಗೆ ಬರುವ ಲಕ್ಷಣಗಳಿಲ್ಲ. “ಪರಿಸ್ಥಿತಿ ಹೇಗೆ ಬದಲಾಗಲಿದೆ ಎಂಬುದನ್ನು ನಾವು ಕಾದು ನೋಡಬೇಕಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪರಿಸ್ಥಿತಿ ಹೀಗಿದ್ದರೂ, ಭಾರತೀಯ ಗ್ರಾಹಕರು ಗಾಬರಿ ಪಡಬೇಕಾದ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

“ಅಮೆರಿಕದ ಗ್ರಾಹಕರಿಗೆ ಹೋಲಿಸಿದರೆ ಭಾರತದ ಮೇಲೆ ಉಂಟಾಗುವ ಪರಿಣಾಮ ಭಿನ್ನವಾಗಿರುತ್ತದೆ. ನೆರೆಯ ಪಾಕಿಸ್ತಾನದ ಸ್ಥಿತಿಗೆ ಹೋಲಿಸಿದರೆ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ” ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ದೇಶದಲ್ಲಿ ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ (ATF) ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಎಲ್ಲಾ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 130 ಡಾಲರ್ ದಾಟುವವರೆಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇಲ್ಲ. ಸದ್ಯಕ್ಕೆ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಆಸುಪಾಸಿನಲ್ಲೇ ಇರಲಿದೆ ಎಂದು ಅಂದಾಜಿಸಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement