ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಅದನ್ನು ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಬೇರೆ ಪಕ್ಷದಿಂದ ಬಂದಿದ್ದಾರೆ.‌ ಕಳೆದ ಬಾರಿ ಚುನಾವಣೆ ಸಂಕನೂರ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಈ ಬಾರಿ ಮತ್ತೆ ಟಿಕೆಟ್ ಕೇಳಿದರು.‌ ಅವರಿಗೆ ಟಿಕೆಟ್ ನೀಡಬಾರದು ಎಂಬುದು ಬಹುತೇಕರ ಅಭಿಪ್ರಾಯವಾಗಿತ್ತು. ಆದರೂ ಸಹ ಪಕ್ಷ ಸಂಕನೂರ ಅವರಿಗೆ ಟಿಕೆಟ್ ನೀಡಿದೆ‌. ಇದರಿಂದ ಎಲ್ಲ ಕಾರ್ಯಕರ್ತರಿಗೂ ನೋವಾಗಿದೆ. ಪಕ್ಷ ನನಗೆ ತಾಯಿ ಇದ್ದಂತೆ. ಪಕ್ಷ ಬಿಡುವುದಿಲ್ಲ. ಆದರೆ ಇದರಿಂದ ನನಗೆ ನೋವಾಗಿದೆ ಎಂದರು.
ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಿರುವುದೇ ಬಿಜೆಪಿ ರಾಜ್ಯದಲ್ಲಿ ಬೆಳೆಯದಿರುವುದಕ್ಕೆ ಇದೇ ಕಾರಣ. ಹುಬ್ಬಳ್ಳಿ-ಧಾರವಾಡದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಬೆಳೆಯಬಾರದು ಎಂದು ನನಗೆ ಟಿಕೆಟ್ ತಪ್ಪಿಸಿರುವ ಸಾಧ್ಯತೆ ಇದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement