ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಭೈರತಿ ಬಸವರಾಜ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು, ಎರಡು ಲಕ್ಷ ರೂಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಒದಗಿಸಬೇಕು, ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ, ಸಾಕ್ಷಿಗಳನ್ನು ಬೆದರಿಸುವಂತಿಲ್ಲ, ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂಬುದು ಸೇರಿದಂತೆ ಕೆಲ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಅಹಮದಾಬಾದಿಗೆ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 12ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀನು ದೊರೆತಿದೆ.


ನಿಮ್ಮ ಕಾಮೆಂಟ್ ಬರೆಯಿರಿ