
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ತರಗತಿಯಲ್ಲಿ ಬೃಹತ್ ಹಾವಿನ ಆರ್ಭಟಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ ಶಿಕ್ಷಕರು, ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಗೋಪಾಲ ನಾಯಕ ನೇತೃತ್ವದಲ್ಲಿ ಸಿಬ್ಬಂದಿ ತಕ್ಷಣವೇ ಆಗಮಿಸಿದರು.
ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತಲುಪಿದಾಗ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ತರಗತಿಯ ಮೇಜಿನ ಕೆಳಗೆ ಸುತ್ತಿಕೊಂಡಿರುವುದು ಕಂಡು ಬಂದಿದೆ.
ನಂತರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದರು. ಹಾವನ್ನು ಹೊರತೆಗೆಯಲು ಪ್ರಯತ್ನಿಸಿದಾಗ ಅದು ಮೇಜಿನ ಮೇಲಿದ್ದ ಪುಸ್ತಕಗಳ ರಾಶಿಯ ನಡುವೆ ಅಡಗಿಕೊಂಡಿತು. ಕೆಲವು ಗಂಟೆಗಳ ಪ್ರಯತ್ನದ ಬಳಿಕ ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು. ನಂತರ ಅದನ್ನು ಹಿಡಿದು ದೂರದ ಕಾಡಿಗೆ ಬಿಡಲಾಯಿತು.



ನಿಮ್ಮ ಕಾಮೆಂಟ್ ಬರೆಯಿರಿ