ಟೆಂಪೋ, ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ; ಒಂದೇ ಕುಟುಂಬದ ಐವರು ಸೇರಿ ಎಂಟು ಜನರು ಸಾವು

ಸೇಲಂ :  ತಮಿಳುನಾಡಿನ ಸೇಲಂ ರಾಷ್ಟ್ರೀಯ ಹೆದ್ದಾರಿಯ ಉತ್ತಮಚೋಳಪುರಂ ಸಮೀಪದ ಅರಿಯನೂರು ಬಳಿ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆಯ (TNSTC) ಬಸ್ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವಿಗೀಡಾಗಿದ್ದಾರೆ.
40ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಈ ಬಸ್ ಕೊಯಮತ್ತೂರಿನಿಂದ ಸೇಲಂಗೆ ಪ್ರಯಾಣಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ವಿಭಜಕವನ್ನು (Centre Median) ದಾಟಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದೆ ಎಂದು ವರದಿಯಾಗಿದೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ವೇಗವಾಗಿ ಬಂದ ಬಸ್ ಎದುರಿನಿಂದ ಬರುತ್ತಿದ್ದ ಸರಕು ಸಾಗಣೆ ಟೆಂಪೋ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಮೂಲಗಳ ಪ್ರಕಾರ, ಟೆಂಪೋ ಆಟೋದಲ್ಲಿ ಪ್ರಾಣಿಸುತ್ತಿದ್ದ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರಲ್ಲಿ ಐವರು ಸಾವಿಗೀಡಾಗಿದ್ದಾರೆ. ಮೃತರ ಪೈಕಿ 11 ತಿಂಗಳ ಹಸುಗೂಸು ಕೂಡ ಸೇರಿದೆ. ಅವರೆಲ್ಲ ಸಮಾರಂಭವೊಂದರಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದರು ಎಂದು ಹೇಳಲಾಗಿದೆ.

ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಆಕೆಯ ಮಗಳಿಗೂ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅವರಿಬ್ಬರೂ ಕೂಡ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ.
ಮೃತರನ್ನು ಸೆಲ್ವರಾಜ, ಮುರುಗನ್, ಅಮುದಾ, ಮಣಿಕಂಠನ್, ಇರುಸಾಯಿ, ಸತ್ಯ (ಮಣಿಕಂಠನ್ ಅವರ ಪತ್ನಿ), ನಿತಿಶಾ (5 ವರ್ಷದ ಬಾಲಕಿ) ಜೀವಿಕಾ (11 ತಿಂಗಳ ಮಗು) ಎಂದು ಗುರುತಿಸಲಾಗಿದೆ. ಪ್ರಸ್ತುತ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಇತರರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅತಿವೇಗ ಅಥವಾ ಯಾಂತ್ರಿಕ ವೈಫಲ್ಯದಿಂದ ಈ ಅಪಘಾತ ಸಂಭವಿಸಿದೆಯೇ ಎಂಬ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಯುತ್ತಿದೆ.
ಈ ಘಟನೆಗೆ ಎಐಎಡಿಎಂಕೆ (AIADMK) ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು “ಸರ್ಕಾರಿ ಬಸ್‌ಗಳು ಪದೇ ಪದೇ ಅಪಘಾತಕ್ಕೀಡಾಗುತ್ತಿರುವುದು ಪ್ರಸ್ತುತ ಸರ್ಕಾರದ ಅವಧಿಯಲ್ಲಿನ ಕಳಪೆ ನಿರ್ವಹಣೆಯನ್ನು ಎತ್ತಿ ತೋರಿಸುತ್ತದೆ” ಎಂದು ಆರೋಪಿಸಿದ್ದಾರೆ. ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement